ಹಳೆಯ ಒಡಂಬಡಿಕೆKNCL
1ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -
2“ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖವಾಗಿ ಅದನ್ನು ಕುರಿತ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ:
3ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.
4ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರ ವಶವಾಗುವಂತೆ ಮಾಡುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿನ್ನುವರು; ನಿನ್ನ ಹಾಲನ್ನು ಕುಡಿಯುವರು,
5ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.
6“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.
7ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”
8ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.
9ಆದುದರಿಂದ ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ಯೆಷೀಮೋತ್, ಬಾಳ್ಮೆಯೋನ, ಕಿರ್ಯಾಥಯಿಮ್ ಎಂಬ ಪಟ್ಟಣಗಳು, ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
10ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು;
11ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸದೆ ಬಿಡೆನು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”
12ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಎದೋಮ್ ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ;
13ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.
14ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”
15ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;
16ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;
17ಅವರೆಲ್ಲರನ್ನು ಬಹಳವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವೆನು, ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”