ಹಳೆಯ ಒಡಂಬಡಿಕೆKNCL

ಕೀರ್ತನೆಗಳು 147

1ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II

2ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II

3ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II

4ನಿಯಮಿಸಿಹನು ತಾರೆಗಳ ಸಂಖ್ಯೆಯನು I ಇಟ್ಟಿಹನು ಪ್ರತಿಯೊಂದಕೂ ಹೆಸರನು II

5ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II

6ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II

7ಧನ್ಯವಾದವಿತ್ತು ಹಾಡಿರಿ ಪ್ರಭುವನು I ಕಿನ್ನರಿಯೊಡನೆ ಭಜಿಸಿರಿ ನಮ್ಮ ದೇವನನು II

8ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II

9ಪಶುಗಳಿಗೂ ಕೂಗುವ ಕಾಗೆಮರಿಗಳಿಗೂ I ಒದಗಿಸುವನು ಬೇಕಾದ ಆಹಾರಗಳನು II

10ಅಶ್ವಬಲದಲಿ ಆತನಿಗೆ ಇಷ್ಟವಿಲ್ಲ I ಶೂರನ ಶಕ್ತಿಯನವನು ಮೆಚ್ಚುವುದಿಲ್ಲ II

11ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II

12ಜೆರುಸಲೇಮೇ, ಕೀರ್ತಿಸು ಪ್ರಭುವನು I ಸಿಯೋನೇ, ಸ್ತುತಿಸು ನಿನ್ನ ದೇವರನು II

13ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II

14ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II

15ಕಳಿಸುವನು ಧರೆಗೆ ತನ್ನ ಆಣತಿ I ಸಿದ್ಧಿಯಾಗುವುದದು ಬಲು ಶೀಘ್ರದಿ II

16ಸುರಿಸುವನು ಹಿಮವನು ಉಣ್ಣೆಯಂತೆ I ಹರಡುವನು ಇಬ್ಬನಿಯನು ಬೂದಿಯಂತೆ II

17ಸುರಿಸುವನು ಆಲಿಕಲ್ಲನು ರೊಟ್ಟಿ ತುಂಡುಗಳಂತೆ I ಕೊರೆಯುವ ಚಳಿಯನು ಕಳಿಸುವನು ಸಹಿಸಲಾಗದಂತೆ II

18ಕರಗುವುವು ಆ ಕಲ್ಲುಗಳು ಆತನ ಅಪ್ಪಣೆಗೆ I ಹರಿಯುವುದು ನೀರು ಆತ ಕಳುಹಿಸುವ ಗಾಳಿಗೆ II

19ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II

20ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II