ಹಳೆಯ ಒಡಂಬಡಿಕೆKNCL

ಕೀರ್ತನೆಗಳು 97

1ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ I ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ I ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ II

2ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II

3ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ I ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ II

4ಇಳೆಯನು ಬೆಳಗಿಸುತ್ತದೆ ಆತನ ಮಿಂಚು I ನಡುಗುತ್ತದೆ ಭೂಮಿ ಅದಕೆ ಬೆಚ್ಚುಬಿದ್ದು II

5ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II

6ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು I ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು II

7ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II

8ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II

9ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II

10ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II

11ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II

12ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II