ಹಳೆಯ ಒಡಂಬಡಿಕೆKNCL

ಕೀರ್ತನೆಗಳು 98

1ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II

2ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II

3ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

4ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ I ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ II

5ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ I ಭಜಿಸಿರಿ ಆತನನು ವಾದ್ಯಮೇಳದೊಂದಿಗೆ II

6ಊದಿರಿ ಕೊಂಬನು, ತುತೂರಿಯನು I ಉದ್ಘೋಷಿಸಿರಿ ಪ್ರಭು ರಾಜನನು II

7ಗರ್ಜಿಸಲಿ ಸಮುದ್ರವು ಅದರಲ್ಲಿರುವುದೆಲ್ಲವು I ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು II

8ಚಪ್ಪಾಳೆ ಹೊಡೆಯಲಿ ನದಿಗಳು I ತಟ್ಟಾಡಲಿ ಬೆಟ್ಟಗುಡ್ಡಗಳು II

9ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II